ಕರುಣೆವಿಲ್ಲದ ಕೊರೊನಾಗೆ ಕವಿ ಸಿದ್ದಲಿಂಗಯ್ಯ ಇನ್ನಿಲ್ಲ. ಅವರು ಇನ್ನೂ ನೆನಪು ಮಾತ್ರ.

Spread the love

ಕರುಣೆವಿಲ್ಲದ ಕೊರೊನಾಗೆ ಕವಿ ಸಿದ್ದಲಿಂಗಯ್ಯ ಇನ್ನಿಲ್ಲ. ಅವರು ಇನ್ನೂ ನೆನಪು ಮಾತ್ರ.

ಅವರಿಗೆ ಕಳೆದ ತಿಂಗಳು ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಮೇ 2 ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇಲ್ಲಿನ ರಂಗದೊರೈ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಮೇ 5ರಂದು ಹಳೆ ವಿಮಾಣ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಒದಗಿಸಲಾಗುತ್ತಿತ್ತು. ಒಂದು ತಿಂಗಳಿಗೂ ಅಧಿಕ ಕಾಲ ಆಸ್ಪತ್ರೆಯಲ್ಲಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆಯೇ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರ ಇದ್ದಾರೆ. ಅವರ ಪತ್ನಿಗೆ ಕೂಡ ಕೊರೊನಾ ಸೋಂಕು ತಗುಲಿತ್ತು. ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಸಿದ್ದಲಿಂಗಯ್ಯ ಅವರು ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದು, ದಲಿತ ಕವಿ ಎಂದೇ ಜನಪ್ರಿಯರಾಗಿದ್ದರು. 1954ರ ಫೆಬ್ರವರಿ 3 ರಂದು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಂಚನಬೆಲೆಯಲ್ಲಿ ಜನಿಸಿದ ಅವರು, ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಿ.ಎ. ಆನರ್ಸ್ (ಐಚ್ಛಿಕ ಕನ್ನಡ) ಪದವಿ ಪಡೆದಿದ್ದರು. 1976ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ವರ್ಣಪದಕದೊಂದಿಗೆ ಎಂ.ಎ. ಪದವಿ, ಪ್ರೊ.ಜಿ.ಎಸ್‌. ಶಿವರುದ್ರಪ್ಪನವರ ಮಾರ್ಗದರ್ಶನದಲ್ಲಿ ‘ಗ್ರಾಮದೇವತೆಗಳು’ ಎಂಬ ಪ್ರೌಢ ಪ್ರಬಂಧದ ಮೇಲೆ 1989ರಲ್ಲಿ ಪಿಎಚ್‌.ಡಿ. ಪದವಿಯನ್ನು ಪಡೆದಿದ್ದರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. 1975ರಲ್ಲಿ ಅವರ ‘ಹೊಲೆಮಾದಿಗರ ಹಾಡು’ ಕವಲ ಸಂಕಲನ ಪ್ರಕಟಗೊಂಡಿತು. ಬಳಿಕ ‘ಸಾವಿರಾರು ನದಿಗಳು’, ‘ಕಪ್ಪುಕಾಡಿನ ಹಾಡು’, ‘ಮೆರವಣಿಗೆ’, ‘ನನ್ನ ಜನಗಳು ಮತ್ತು ಇತರ ಕವಿತೆಗಳು’, ‘ಆಯ್ದ ಕವನಗಳು’, ‘ಅಲ್ಲೆಕುಂತವರು’ ಮುಂತಾದ ಕವನ ಸಂಕಲನಗಳು ಪ್ರಕಟಗೊಂಡಿವೆ.‘ಪಂಚಮ’, ‘ನೆಲಸಮ’, ‘ಏಕಲವ್ಯ’ ಪ್ರಮುಖ ನಾಟಕಗಳಾಗಿವೆ. ‘ಅವತಾರಗಳು’ ಪ್ರಬಂಧ ಕೃತಿಯು 1991ರಲ್ಲಿ ಪ್ರಕಟಗೊಂಡಿದೆ. ‘ರಸಗಳಿಗೆಗಳು’, ‘ಎಡಬಲ’,  ‘ಹಕ್ಕಿನೋಟ’, ‘ಜನಸಂಸ್ಕೃತಿ’, ‘ಉರಿಕಂಡಾಯ’ ಮುಂತಾದ ಲೇಖನ ಸಂಗ್ರಹಗಳು, ‘ಸದನದಲ್ಲಿ ಸಿದ್ಧಲಿಂಗಯ್ಯ ಭಾಗ 1 ಮತ್ತು 2’ ಸೇರಿದಂತೆ ವಿವಿಧ ಕೃತಿಗಳು ಪ್ರಕಟಗೊಂಡಿವೆ. ಅವರ ಆತ್ಮಕಥೆ ‘ಊರು ಕೇರಿ’ ಎರಡು ಭಾಗದಲ್ಲಿ ಪ್ರಕಟಗೊಂಡಿದೆ. ಬೆಂಗಳೂರು ವಿಶ್ವವಿದ್ಯಾಲಯದ  ಪ್ರಸಾರಂಗಕ್ಕಾಗಿ ಅವರು ‘ಸಮಕಾಲೀನ ಕನ್ನಡ ಕವಿತೆಗಳು’ ಭಾಗ-3 ಮತ್ತು ಭಾಗ-4ನ್ನು ಸಂಪಾದಿಸಿಕೊಟ್ಟಿದ್ದಾರೆ. ಅವರ ‘ಊರು ಕೇರಿ’ ಆತ್ಮಕಥೆ ಇಂಗ್ಲಿಷ್‌ ಹಾಗೂ ತಮಿಳಿಗೂ ಅನುವಾದಗೊಂಡಿದ್ದು, ಇಂಗ್ಲಿಷ್‌ ಅನುವಾದವನ್ನು ಕೇಂದ್ರ ಸಾಹಿತ್ಯ ಅಕಾಡಮಿಯು ಪ್ರಕಟಿಸಿದೆ. ಅವರ ಹಲವಾರು ಕವಿತೆಗಳು ಇಂಗ್ಲಿಷ್‌, ಹಿಂದಿ, ತಮಿಳು, ಬಂಗಾಳಿ, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಅನುವಾದಗೊಂಡಿವೆ. ಪುಟ್ಟಣ್ಣ ಕಣಗಾಲರು ನಿರ್ದೇಶಿಸಿದ ‘ಧರಣಿಮಂಡಲ ಮಧ್ಯದೊಳಗೆ’ ಚಿತ್ರಕ್ಕೆ ಬರೆದ ಗೀತೆಗೆ ರಾಜ್ಯಪ್ರಶಸ್ತಿ ಸಂದಿದೆ. ಶ್ರವಣಬೆಳಗೊಳದಲ್ಲಿ ನಡೆದ 81ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಸೇರಿದಂತೆ ಮುಂತಾದ ಗೌರವಗಳು ಅವರಿಗೆ ಬಂದಿವೆ. ರಾಜ್ಯೋತ್ಸವ ಪ್ರಶಸ್ತಿ, ಡಾ. ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ. ಅಂಬೇಡ್ಕರ್ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್‌ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ನೃಪತುಂಗ ಪ್ರಶಸ್ತಿ , ಪಂಪ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಗೌರವಗಳು ಅವರಿಗೆ ಸಂದಿವೆ. ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ 1988-94 ಮತ್ತು 1995-2001ರವರೆಗೆ ಎರಡುಬಾರಿ ನಾಮಕರಣಗೊಂಡಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ವರದಿ – ಸಂಪಾದಕೀಯ

Leave a Reply

Your email address will not be published. Required fields are marked *