ನಾಡಿನ ಸಮಸ್ತ ಜನತೆಗೆ ಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು :-
ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ ಮಹೋತ್ಸವದ ದಿನವಿದು ಎಂಬುದು ವಿಶೇಷ. ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡಿ ಶಿವನಾಮ ಪಠಿಸುತ್ತಾ, ತಪಸ್ಸು ಮಾಡಿ, ಶಿವನನ್ನು ಮೆಚ್ಚಿಸಿ, ವಿವಾಹವಾದಳೆಂಬುದು ಪ್ರತೀತಿ. ಶಿವ ರುದ್ರತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ. ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಹಾಗಾಗಿ, ಭಕ್ತರು ಇಡೀ ರಾತ್ರಿ ಎಚ್ಚರವಿದ್ದು, ನೀಲಕಂಠನನ್ನು ಸ್ತುತಿಸುತ್ತಾರೆ. ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಲಿಂಗಪುರಾಣದ ಪ್ರಕಾರ, ಲಿಂಗ ರೂಪಿಯಾಗಿ ಭಕ್ತರಿಗೆ ಅನುಗ್ರಹ ನೀಡಿದ ದಿನವಿದು. ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ. ಇದು ಸ್ಕಂದ ಪುರಾಣ ಒಂದು ಭಾಗ ನಾಡಿನ ಸಮಸ್ತ ಜನತೆಗೆ ತಾವರಗೇರಾ ನ್ಯೂಸ್ ಪತ್ರಿಕೆ ಬಳಗ ಹಾಗೂ ತಾವರಗೇರಾ ನ್ಯೂಸ್ ವೆಬ್ ಬಳಗದವತಿಯಿಂದ ಶೀವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು..